ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಚಿತ್ರನಟಿ ರಮ್ಯಾ ಭೇಟಿ ಮಾಡಿ, ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಖಂಡಿತ ಈಡೇರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
“ನಿಮ್ಮನ್ನು ನೋಡಿದಾಗ ಸಂಕಟವಾಗುತ್ತದೆ. ಮಳೆ, ಚಳಿ, ಬಿಸಿಲು ಎನ್ನದೆ ನೀವೆಲ್ಲ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೀರಿ. ಇದು ಮಹಿಳೆಯರಲ್ಲಿರುವ ಶಕ್ತಿಯನ್ನು ತೋರಿಸುತ್ತದೆ. ನೀವು ಕೇಳುತ್ತಿರುವ ಬೇಡಿಕೆಗಳಲ್ಲಿ ಯಾವುದೇ ತಪ್ಪಿಲ್ಲ. ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಎಂದು ಕಳೆದ ವಾರ ಯು.ಟಿ. ಖಾದರ್ ಅವರೂ ಹೇಳಿದ್ದರು. ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂಬ ನಂಬಿಕೆ ನನಗಿದೆ. ನನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸುತ್ತೇನೆ” ಎಂದು ರಮ್ಯಾ ಹೇಳಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲೂ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಅವರು, ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಮತ್ತು AIUTUC ಸಂಘಟಕರೊಂದಿಗೆ ಸಮಯ ಕಳೆದಿದ್ದು, ಅವರ ಪ್ರಾಮಾಣಿಕತೆ ಮತ್ತು ಬದ್ಧತೆ ಮೆಚ್ಚುಗೆಗೆ ಪಾತ್ರವಾಯಿತು ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮುನ್ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಗೌರವ ಮತ್ತು ನ್ಯಾಯಯುತ ವೇತನವನ್ನು ಮಾತ್ರ ಕೇಳುತ್ತಿದ್ದಾರೆ. ಅವರಿಗೆ ತಿಂಗಳಿಗೆ ₹10,000 ನೀಡುವ ಭರವಸೆ ನೀಡಲಾಗಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಕರ್ನಾಟಕ ಸರ್ಕಾರ ತನ್ನ ಭರವಸೆಯನ್ನು ಈಡೇರಿಸಲಿದೆ ಎಂಬ ವಿಶ್ವಾಸವಿದೆ. ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ತಾನು ನಿಲ್ಲುವುದಾಗಿ ರಮ್ಯಾ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
Spent time with ASHA workers and the AIUTUC organisers (genuine and honest, I was really inspired and impressed by them) at Freedom Park today. Listening to them was humbling. They hold up our public health system and ask only for dignity and fair pay. We gave them our word on ₹10,000 a month. A promise made must be a promise kept. I stand by the ASHA workers protesting. I have faith that our govt in Karnataka will fulfil their promise.
— Ramya/Divya Spandana (@divyaspandana) November 24, 2026














































































