ಬೆಂಗಳೂರು: ದಕ್ಷಿಣ ರಾಜ್ಯಗಳ ಪ್ರತ್ಯೇಕ ರಾಷ್ಟ್ರ ಬೇಡಿಕೆ ಕುರಿತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆಂಬ ವಿಚಾರ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವ ಬಿಜೆಪಿಗೆ ಸಂಸದ ಡಿ.ಕೆ.ಸುರೇಶ್ ಸಹೋದರರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎದಿರೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆದ ಡಿಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ ಅವರು ದೇಶ ವಿಭಜನೆಯನ್ನು ಪ್ರತಿಪಾದಿಸಿಲ್ಲ, ಬದಲಾಗಿ ಆದಾಯತೆರಿಗೆಯನ್ನು ಸಮಾನ ಹಂಚಿಕೆ ಮಾಡಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂದು ಡಿಕೆ.ಸುರೇಶ್ ಆಗ್ರಹಿಸಿದ್ದಾರೆಂದು ಸಮರ್ಥಿಸಿಕೊಂಡರು. ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ದೂರಿದ ಡಿಕೆಶಿ, ಈ ಬಗ್ಗೆ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಜೊತೆಗೆ, ಕೇಂದ್ರದ ಅನುದಾನ ಮತ್ತು ತೆರಿಗೆಯಲ್ಲಿ ರಾಜ್ಯಕ್ಕೆ ಸರಿಯಾದ ಪಾಲು ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಕ್ಷವು ಭಾರತವನ್ನು ಸದಾ ಒಗ್ಗಟ್ಟಾಗಿ ಇರಿಸಿದೆ ಎಂದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಖಂಡ ಭಾರತವನ್ನು ಕಲ್ಪಿಸಿಕೊಂಡು ಕೆಲಸ ಮಾಡಿದೆ ಎಂದು ಡಿಕೆಶಿ ಹೇಳಿದರು.




























































