ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಕಲ್ಲು ಕ್ವಾರಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಗುಡುಗಿದ್ದಾರೆ.
ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದಕ್ಕಾಗಿ ತನಿಖಾ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ ಎಂದರು.
ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ಪ್ರಭಾವಿಗಳೇ ಇರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಅಕ್ರಮ ಕ್ವಾರಿಗಳು ನಡೆಯುತ್ತವೆ ಎಂಬುದನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.
ಸದ್ಯದಲ್ಲೇ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆಯಸಲಾಗುವುದು. ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಕ್ವಾರಿಗಳು ನಡೆಸುತ್ತಿದ್ದಾರೋ ಅವುಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ಸೂಚನೆ ನೀಡುವುದಾಗಿ ತಿಳಿಸಿದರು.