ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಹುಪಾಲು ಬೆಂಬಲಿಗರ ಗೆಲುವಿನ ಸಂಭ್ರಮದ್ಲಲಿರುವ ಬಿಜೆಪಿ ಮತ್ತೊಂದು ಮುಂದಿನ ಸಮರ ತಂತ್ರಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಿಎಂ ತವರಲ್ಲಿ ಪಕ್ಷದ ವಿಶೇಷ ಕಾರ್ಯಕಾರಿಣಿ ನಡೆಯಲಿದೆ.
ಭಾರತೀಯ ಜನತಾ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಜನವರಿ 3ರಂದು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ. ಜನವರಿ 2ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾಣಾ ತಿಳಿಸಿದ್ದಾರೆ.
ರಾಜ್ಯ ಪ್ರಭಾರಿಗಳೂ ಆದ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಸುಮಾರು 180 ಜನರು ಭಾಗವಹಿಸಲಿದ್ದಾರೆ ಎಂದು ಸುರಾಣಾ ತಿಳಿಸಿದ್ದಾರೆ.




















































