ಬೆಂಗಳೂರು: ಮುಂದಿನ ಚುನಾವಣೆಯಲ್ಲೂ ತಾವು ಬಾದಾಮಿ ಕ್ಷೇತ್ರದಲ್ಲೇ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲಿಂದು ಕುತೂಹಲಕಾರಿ ಬೆಳವಣಿಗೆ ನಡೆಯಿತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರಸ್ ಶಾಸಕ ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.
ಈ ವಿಚಾರ ಕುರಿತಂತೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆದಿರುವಾಗಲೇ, ಬಾದಾಮಿಯಿಂದ ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯರ ನಿವಾಸಕ್ಕೆ ಧಾವಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಯಾವ ಕಾರಣಕ್ಕೂ ಚಾಮರಾಜಪೇಟೆಗೆ ಹೋಗಬಾರದು, ಮತ್ತೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು.
ತಾವು ಮುಂದೆ ಮುಖ್ಯಮಂತ್ರಿ ಆಗಬೇಕು. ತಮಗೆ ಸಿಎಂ ಆಗುವ ಅವಕಾಶ ಇದೆ. ಹಾಗಾಗಿ ಬಾದಾಮಿಯಿಂದಲೇ ಸ್ಪರ್ಧೆ ಮಾಡಿ ಗೆಲ್ಲಬೇಕು, ಬೇರೆ ಕ್ಷೇತ್ರಕ್ಕೂ ಹೋಗಬಾರದೆಂದು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಈ ಕುರಿತಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಾವು ಮುಂದಿನ ಬಾದಾಮಿಯಲ್ಲೇ ಬಾದಾಮಿಯಲ್ಲೇ ಸ್ಪರ್ದಿಸುವುದಾಗಿ ಘೋಷಿಸಿದರು. ಯಾವುದೇ ಕಾರಣಕ್ಕೂ ಚಾಮರಾಜಪೇಟೆ ಅಥವಾ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.