ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ʼಕಲಿಕಾ ನಿರ್ವಹಣಾ ವ್ಯವಸ್ಥೆʼಯ ಮೂಲಕ ಬೋಧನೆ- ಕಲಿಕೆಗಾಗಿ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದರು.
ಏಕಕಾಲದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಬ್ಲಾಂಕ್ವೆಟ್ ಹಾಲ್ ವೇದಿಕೆಗೆ ವರ್ಚುಯಲ್ ಮೂಲಕ ಲಿಂಕ್ ಆಗಿ ಟ್ಯಾಬ್‌ಗಳನ್ನು ವಿತರಣೆ ಮಾಡಿದರು. ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು, ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರೂ ಆನ್‌ಲೈನ್ ವೇದಿಕೆ ಮೂಲಕ ಟ್ಯಾಬ್‌ಗಳನ್ನು ವಿತರಣೆ ಮಾಡಿದರು.
ಸ್ಮಾರ್ಟ್ ಕ್ಲಾಸ್ ರೂಂ ಲೋಕಾರ್ಪಣೆ
ಬ್ಯಾಂಕ್ವೆಟ್ ಹಾಲ್‌ನಲ್ಲಿ ಸ್ಥಾಪಿಸಲಾಗಿದ್ದ ಮಾದರಿ ಸ್ಮಾಟ್‌ಕ್ಲಾಸ್ ರೂಂ ಅನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿ ಅದರ ವ್ಯವಸ್ಥೆ ವೀಕ್ಷಿಸಿದರು.
ಅದರ ಮೂಲಕ ವಿದ್ಯಾರ್ಥಿಗಳು ಹೇಗೆ ಕಲಿಯುತ್ತಾರೆ ಎಂಬುದನ್ನು ಅವರು ಗಮನಿಸಿದರಲ್ಲದೆ ಈ ಕುರಿತ ಮಾಹಿತಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಂದ ಪಡೆದುಕೊಂಡರು. ಸ್ಮಾರ್ಟ್‌ಕ್ಲಾಸ್ ರೂಂನ ತಾಂತ್ರಿಕ ನೈಪುಣ್ಯತೆ ಹಾಗೂ ಬೋಧನೆ-ಕಲಿಕೆ ವಿಧಾನದ ಬಗ್ಗೆ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕೋವಿಡ್ ಸಂಕಷ್ಟ ಕಾಲದಲ್ಲಿ ತಮ್ಮ ನೆರವಿಗೆ ಬಂದ ಕಲಿಕಾ ನಿರ್ವಹಣಾ ವ್ಯವಸ್ಥೆ, ಟ್ಯಾಬ್‌ಗಳು ಹಾಗೂ ಸ್ಮಾರ್ಟ್‌ಕ್ಲಾಸ್ ರೂಂಗಳ ಉಪಯೋಗದ ಬಗ್ಗೆ ಇಬ್ಬರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಮಕ್ಷಮದಲ್ಲಿ ಅಭಿಪ್ರಾಯ ಹಂಚಿಕೊಂಡರು.
ರಾಜ್ಯದಲ್ಲಿನ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಉಚಿತವಾಗಿ ನೀಡಲಾಗಿದೆ. ಈ ಯೋಜನೆಗೆ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.
ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ನಗರ- ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಿಸುವುದು, ಅವರ ನಡುವೆ ಡಿಜಿಟಲ್ ಅಂತರವನ್ನು ಅಳಿಸಿಹಾಕುವ ಮತ್ತೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಇಂಥ ಉತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ನುಡಿದರು.
ಅಲ್ಲದೆ 27.77 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ನಿರ್ವಹಣೆ ವ್ಯವಸ್ಥೆ ವಿದ್ಯಾರ್ಥಿಗಳು ಕಲಿಯುವುದಕ್ಕೆ ಅನುವಾಗುವಂತೆ 2,500 ಸ್ಮಾರ್ಟ್‌ಕ್ಲಾಸ್ ರೂಂಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಪೂರಕವಾಗಲಿದೆ ಎಂದು ಅವರು ನುಡಿದರು.