ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೊತೆಗೆ ಉತ್ತಮ ಅಂಕಗಳನ್ನು ವೃದ್ಧಿಸಿಕೊಂಡು, ಪೂರ್ಣಾಂಕಗಳನ್ನು ಪಡೆದಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.
‘ಮೂರು ಬಾರಿ ಪರೀಕ್ಷೆ’ ಎಂಬ ವಿನೂತನ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಸಾಗುವಲ್ಲಿ ಯಶಸ್ವಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದಿರುವ ಸಚಿವ ಮಧು ಬಂಗಾರಪ್ಪ, ಶಿಕ್ಷಣದ ಮೂಲಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧ ಎಂದಿದ್ದಾರೆ.






















































