ಬೆಂಗಳೂರು: ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು. ಸ್ತ್ರೀಶಕ್ತಿ ಸಂಘಗಳ ಮೂಲಕ ಆದಾಯವೃದ್ಧಿ ಆಗಲಿದ್ದು, ಕುಟುಂಬ ನಿರ್ವಹಣೆಗೆ ಸಹಕಾರಿ ಆಗಲಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರ ಹೇರೋಹಳ್ಳಿಯ ಶಾಸಕರ ಕಚೇರಿಯ ಆವರಣದಲ್ಲಿ ಸ್ತ್ರೀ ಶಕ್ತಿ ಸಂಘಗಳ ನೋಂದಣಿ , ಸ್ತ್ರೀ ಶಕ್ತಿ ಸಂಘಗಳ ಕಾರ್ಯವ್ಯಾಪ್ತಿಯ ಬಗ್ಗೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸುಮಾರು 23 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇನೆ. ಉಚಿತ ಸಾಮೂಹಿಕ ವಿವಾಹ, ಮಕ್ಕಳಿಗೆ ನೋಟ್ ಪುಸ್ತಕ, ಸಮವಸ್ತ್ರ ವಿತರಣೆ ಸೇರಿದಂತೆ ಹಲವರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದೇನೆ.
ಸ್ತ್ರೀ ಶಕ್ತಿ ಸಂಘಗಳ ನೋಂದಣಿಗೆ ಹಣ ಕೇಳುತ್ತಿದ್ದಾರೆ. ನೋಂದಣಿ ಮಾಡಿಕೊಳ್ಳಲು ಪರದಾಡುತ್ತಿರುವುದನ್ನು ಮನಗಂಡು ಶಾಸಕರ ಕಚೇರಿಯಲ್ಲಿ ಉಚಿತವಾಗಿ ನೋಂದಣಿ ಮಾಡಿಕೊಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಎಂದರು.
ಕಳೆದ ಒಂದು ವರ್ಷದಿಂದ ಸ್ತ್ರೀ ಶಕ್ತಿ ಸಂಘಗಳ ನೋಂದಣಿ ಮಾಡಿಕೊಡಲಾಗುತ್ತಿದೆ. ಸುಮಾರು 2 ಸಾವಿರಕ್ಕೂ ಅಧಿಕ ಸಂಘಗಳು ನೋಂದಣಿ ಆಗಿವೆ. ಸಂಘಗಳ ನೋಂದಣಿ ಮಾಡಿಕೊಡುವುದರ ಜೊತೆಗೆ ಮಹಿಳೆಯರಿಗೆ ತರಬೇತಿ ನೀಡಿ ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಬ್ಯಾಂಕ್ ನಿಂದ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಮಹಿಳೆಯರ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲಾಗುತ್ತಿದೆ. ಈ ಸಂಘಗಳಲ್ಲಿ 1 ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ. ಇದಕ್ಕಾಗಿ ಬಿಡಿಸಿಸಿ ಬ್ಯಾಂಕ್ ನಿಂದ 20 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು.14 ಲಕ್ಷ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗಿದೆ. 45 ಸಾವಿರ ಗುಂಪುಗಳಿಗೆ ಸಾಲ ನೀಡಲಾಗಿದೆ ಎಂದು ಹೇಳಿದರು.