ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಕಾಮಕ್ರೌರ್ಯದ ಘಟನೆ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಕಸರತ್ತು ನಡೆದಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್, ರಾಜ್ಯದಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಒಟ್ಟು 32ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿದ್ದು, ಎಲ್ಲಡೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲ ಕಡೆ ಭದ್ರತಾ ವ್ಯವಸ್ಥೆ ಉತ್ತಮವಾಗಿದೆ ಎಂದು ಹೇಳಿದರು.
ಲಭ್ಯವಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಭದ್ರತೆ ಮತ್ತು ನಿಗಾ ಹೆಚ್ಚಿಸುವ ನಿಟ್ಟಿನಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುತ್ತೇನೆ. ಸಂಬಂಧಿತ ಇಲಾಖೆ ಹಾಗೂ ಎಲ್ಲ ಕುಲಪತಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದು ಸಚಿವರು ತಿಳಿಸಿದರು.
ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳು ಎಂದ ಅವರು, ಪಾತಕಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.