ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ಪ್ರಕರಣದ ತನಿಖೆ ಇ.ಡಿ. ಅಂಗಳಕ್ಕೆ ಜಿಗಿದಂತಿದೆ. ಬುಧವಾರ ಬೆಳ್ಳಂಬೆಳಿಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಸೇರಿದಂತೆ 18 ಹೆಚ್ಚು ಕಡೆ ಕಾರ್ಯಾಚರಣೆ ಕೈಗೊಂಡು ಸಂಚಲನ ಮೂಡಿಸಿದ್ದಾರೆ.
ಕರ್ನಾಟಕ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ಕುರಿತಂತೆ ಎಸ್‌ಐಟಿ ಹಾಗೂ ಸಿಬಿಐ ತನಿಖೆ ನಡೆಸುತ್ತಿದೆ. ವಾಲ್ಮಿಕಿ ನಿಗಮದ ಅಧಿಕಾರಿಗಳು ಬಂಧನಕ್ಕೊಳಗಾಗಿದ್ದು, ಹಗರಣ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ನಾಗೇಂದ್ರ ಅಚರನ್ನೂ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಾಲ್ಮಿಕಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರಿಗೂ ತನಿಖಾಧಿಕಾರಿಗಳು ನೊಟೀಸ್ ನೀಡಿದ್ದಾರೆ. ಅದೇ ಹೊತ್ತಿಗೆ ಕರ್ನಾಟಕ, ತೆಲಂಗಾಣ ಸಹಿತ 18 ಕಡೆ ಇಡಿ ದಾಳಿ ನಡೆದಿದೆ.
ವಾಲ್ಮಿಕಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.
ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಶಾಸಕ ನಾಗೇಂದ್ರ ಮನೆ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲ್ಯಾಟ್ ಮೇಲೂ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದೆ. ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಲಗ್ಗೆ ಹಾಕಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.