ಬೆಂಗಳೂರು; ವಾಲ್ಮಿಕಿ ನಿಗಮ ಹಗರಣ; ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬುಧವಾರ ಸಿಎಂ ನಿವಾಸಕ್ಕೆ ಬಿಜೆಪಿ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್.ಅಶೋಕ ತಿಳಿಸಿದರು.