ಬೆಂಗಳೂರು: ಮತದಾರರ ಪಟ್ಟಿ ಗೋಲ್‌ಮಾಲ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ರಾಜ್ಯದ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದೆ. ಕ್ಷಿಪ್ರ ಕ್ರಮವೊಂದರಲ್ಲಿ ಈ ಅಕ್ರಮ ಸಂಬಂಧ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ನಿರ್ದೇಶನ ನೀಡಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಬೆಂಗಳೂರಿನ ವಿವಿಧೆಡೆ ‘ಚಿಲುಮೆ’ ಸಂಸ್ಥೆ ಮೂಲಕ ಲಕ್ಷಾಂತರ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಆಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿರುವ ಇಬ್ಬರು ಅಧಿಕಾರಿಗಳ ಅಮಾನತಿಗೆ ಆಯೋಗ ನಿರ್ದೇಶನ ನೀಡಿದೆ.
ಇದೇವೇಳೆ, ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿನ ಹೆಸರು ಅಳಿಸುವಿಕೆ ಮತ್ತು ಸೇರ್ಪಡೆಗಳ ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗವು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಮತ್ತು ಇಬ್ಬರು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳನ್ನು ಅಮಾನತುಗೊಳಿಸಿದೆ. ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಯ ಉದ್ಯೋಗಿಗಳು ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮತದಾರರ ಪಟ್ಟಿಯಿಂದ ಸುಮಾರು 27 ಲಕ್ಷ ಹೆಸರುಗಳನ್ನು ಅಳಿಸಿದ್ದಾರೆ ಮತ್ತು 11 ಲಕ್ಷ ಮತದಾರರನ್ನು ಸೇರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.





































































