ಬೆಂಗಳೂರು; ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ.
ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.