ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ 8 ಗ್ರಾಮಗಳ ವ್ಯಾಪ್ತಿಯಲ್ಲಿ 18 ಸಾವಿರ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಲೂರು, ನೆಲಗುಳಿ, ದೇವಗೆರೆಯಲ್ಲಿ ಮನೆಗಳು ಹಂಚಿಕೆಗೆ ಸಿದ್ಧವಾಗಿದೆ ಎಂದರು.
ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸ್ತ್ರೀ ಶಕ್ತಿ ಸಂಘಗಳನ್ನು ಉಚಿತವಾಗಿ ನೋಂದಾಯಿಸಿ, ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಯಾವುದಾದರೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ತಿಳಿಸಿ ಎಂದು ಪ್ರಶ್ನಿಸಿದರು.
ಯಶವಂತಪುರದ ಜನತೆ ಯಾರು ಕೆಲಸ ಮಾಡುತ್ತಾರೆ? ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ? ಎಂಬುದನ್ನು ಗಮನಿಸಿ ಮತ ನೀಡುತ್ತಾರೆ. ಕೇವಲ ಕಣ್ಣೀರಾಕಿದಾಕ್ಷಣ ಮತದಾರರು ಕರಗುವುದಿಲ್ಲ. ಅವರು ಬುದ್ಧಿವಂತರಿದ್ದಾರೆ ಎಂದರು.
ಜೆಡಿಎಸ್ ಅಭ್ಯರ್ಥಿ ಐದು ವರ್ಷದಲ್ಲಿ ಕೇವಲ ಎರಡು ತಿಂಗಳು ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಅದೂ ಚುನಾವಣೆ ಘೋಷಣೆಯಾಗುವಾಗ. ಉಳಿದ ದಿನಗಳಲ್ಲಿ ಕ್ಷೇತ್ರದ ಜನರು ನೆನಪಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.
ಎಸ್.ಟಿ.ಸೋಮಶೇಖರ್ ಅವರ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆ:
ಎಸ್.ಟಿ.ಸೋಮಶೇಖರ್ ಅವರು ಮತಪ್ರಚಾರ ನಡೆಸಿದ ಕಡೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಕಾರ್ಯಕರ್ತರಿಗೆ ಎಸ್.ಟಿ.ಸೋಮಶೇಖರ್ ಅವರು ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಕಾರ್ಯಕರ್ತರು, ಎಸ್.ಟಿ.ಸೋಮಶೇಖರ್ ಅವರು ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಲಿಲ್ಲ. ಕೋವಿಡ್ ಸಮಯದಲ್ಲಿ ಕಷ್ಟಕ್ಕೆ ಸ್ಪಂದಿಸಿದರು. ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.