ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಕುರಿತ ಚರ್ಚೆಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನಾಗಲಿ ನನ್ನ ಮಗ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಯಚೂರು ಪ್ರವಾಸ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧಿಸುತ್ತಾರೆ ಎಂಬ ಆತಂಕ ಸಂಸದ ಪ್ರತಾಪ್ ಸಿಂಹ ಅವರಿಗೆ ಇದೆ. ಸೋಲಿನ ಭೀತಿ ಪ್ರತಾಪ್ ಅವರನ್ನು ಕಾಡುತ್ತಿದೆ. ಆದರೆ ಯತೀಂದ್ರ ಆಗಲೀ ನಾನಾಗಲಿ ಸ್ಪರ್ಧಿಸುವುದಿಲ್ಲ ಎಂದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಗಳಾಗಬಹುದೆಂದು ಪಕ್ಷವೇ ತೀರ್ಮಾನಿಸಲಿದೆ. ಅಲ್ಲಿ ವೀಕ್ಷಕರಾಗಿ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ ಅವರನ್ನು ನೇಮಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಸಚಿವ ಸುರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅನಂತರವೇ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.


























































